ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಭೇಟಿ ನೀಡಿದರು. ನೌಕಾಪಡೆಯ ಮುಖ್ಯಸ್ಥ, ಅಡ್ಮಿರಲ್ ಕರಂಬೀರ್ ಸಿಂಗ್‍ರೊಂದಿಗೆ ಗೋವಾದಿಂದ ಹೆಲಿಕಾಪ್ಟರ್ ಮೂಲಕ ಐಎನ್‍ಎಸ್ ಕದಂಬ ನೌಕಾನೆಲೆಯ ಹೆಲಿಪ್ಯಾಡ್‍ಗೆ ಆಗಮಿಸುವ ವೇಳೆ ಕದಂಬ ನೌಕಾನೆಲೆಯ ಎರಡನೇಯ ಹಂತದ ವಿಸ್ತರಣಾ ಕಾಮಗಾರಿಗಳ ವೈಮಾನಿಕ ಸಮೀಕ್ಷೆಯನ್ನು ನಡೆಸಿದರು.
ನೌಕಾಪ್ರದೇಶದ ಸರ್ವೇಕ್ಷಣೆ ನಡೆಸಿದ ಸಚಿವ ರಾಜನಾಥ ಸಿಂಗ್ ರಿಗೆ ಅಧಿಕಾರಿಗಳು ಎರಡನೇಯ ಹಂತದ ಕಾಮಗಾರಿ ಕುರಿತು ಮಾಹಿತಿ ನೀಡಿದರು. ಇದೇ ವೇಳೆ ಹಡಗುಗಳ ರಿಪೇರಿ ಕಾರ್ಯ ಕೈಗೊಳ್ಳುವ ಲಿಫ್ಟಿಂಗ್ ಯಂತ್ರಗಳ ಸಾಮರ್ಥ್ಯವನ್ನು ಪ್ರದರ್ಶಿಸಲಾಯಿತು.
ಜೊತೆಗೆ ನೌಕಾ ಜಟ್ಟಿಯಲ್ಲಿನ ಅಭಿವೃದ್ಧಿ ಕಾರ್ಯಗಳನ್ನ ಪರಿಶೀಲಿಸಿದರು. ಬಳಿಕ ನೌಕಾನೆಲೆ ಸಿಬ್ಬಂದಿಗಾಗಿ ನೂತನವಾಗಿ ನಿರ್ಮಿಸಲಾದ ವಸತಿಗೃಹಕ್ಕೆ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದು ಅಲ್ಲಿನ ಮೂಲಭೂತ ಸೌಕರ್ಯಗಳು, ಇಂಧನ ದಕ್ಷತೆ, ತ್ಯಾಜ್ಯ ನಿರ್ವಹಣೆ ಹಾಗೂ ಪರಿಸರ ಸ್ನೇಹಿ ವ್ಯವಸ್ಥೆಗಳನ್ನು ವೀಕ್ಷಿಸಿದರು.ಇದೆ ವೇಳೆ ಕಾರವಾರದ ಅರಗಾ ದಲ್ಲಿ ಇರುವ ಕದಂಬಾ ನೌಕಾನೆಲೆಗೆ ತಮ್ಮ ಜಮೀನನ್ನು ನೀಡಿದ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಿ, ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಒದಗಿಸಲು ಶಿಪ್ ಯಾರ್ಡ ನಿರ್ಮಿಸಲು ಕ್ರಮ ಕೈಗೊಳ್ಳುವಂತೆ ರಕ್ಷಣಾ ಸಚಿವ ರಾಜನಾಥ ಸಿಂಗ್ ರವರಿಗೆ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ ರೂಪಾಲಿ ಎಸ್.ನಾಯ್ಕ ಮನವಿ ಮಾಡಿದ್ದಾರೆ.
ಕಾರವಾರ ಮತ್ತು ಅಂಕೋಲಾ ಈ ಎರಡೂ ತಾಲೂಕಿನಲ್ಲಿ 4604 ಕುಟುಂಬಗಳು ನೌಕಾನೆಲೆಯಲ್ಲಿ ನಿರಾಶ್ರಿತರಾಗಿದ್ದಾರೆ. ಈ ಕುಟುಂಬಗಳು ನಿರಾಶ್ರಿತವಾಗಿ 3 ದಶಕಗಳಾದರೂ ಸಮಾಜದಲ್ಲಿ ಗೌರವಯುತ ಬದುಕು ಕಂಡುಕೊಳ್ಳುವಲ್ಲಿ ಇದುವರೆಗೂ ಸಾಧ್ಯವಾಗಿಲ್ಲ. ಸದ್ಯ ಕೇವಲ 968 ಕುಟುಂಬಗಳಿಗೆ ಮಾತ್ರ ಉದ್ಯೋಗ ನೀಡಲಾಗಿದೆ.
ನೌಕಾನೆಲೆ ನಿರಾಶ್ರಿತರು ದೇಶಕ್ಕಾಗಿ, ದೇಶದ ರಕ್ಷಣೆಗಾಗಿ ತಮ್ಮ ಮನೆ, ಭೂಮಿ ಎಲ್ಲವನ್ನೂ ತ್ಯಾಗ ಮಾಡಿದ್ದಾರೆ. ಈ ಕಾರಣದಿಂದ ನಿರಾಶ್ರಿತರು ಉದ್ಯೋಗ, ಗೌರವಯುತ ಬದುಕಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನೂ ಹೊಂದಿ ಸಮಾಜದ ಮುಖ್ಯ ವಾಹಿನಿಯಲ್ಲಿ ಸೇರ್ಪಡೆಯಾಗುವಂತಾಗಬೇಕು.
ಇದಕ್ಕಾಗಿ ನೌಕಾನೆಲೆ ನಿರಾಶ್ರಿತರನ್ನು ರಾಷ್ಟ್ರೀಯ ಸಂತ್ರಸ್ತರು ಎಂದು ಘೋಷಣೆ ಮಾಡಬೇಕು.ನಾಲ್ಕು ಸಾವಿರಕ್ಕೂ ಹೆಚ್ಚು ನಿರಾಶ್ರಿತ ಪ್ರತಿ ಕುಟುಂಬದ ಓರ್ವ ಸದಸ್ಯನಿಗೆ ಒಂದು ಉದ್ಯೋಗ ಕೊಡಬೇಕು. ಅವರಿಗೆ ಅಗತ್ಯವಾದ ಎಲ್ಲ ಸೌಲಭ್ಯಗಳನ್ನೂ ದೊರಕಿಸಿಕೊಡುವ ಮೂಲಕ ದೇಶಕ್ಕಾಗಿ ತ್ಯಾಗ ಮಾಡಿದವರ ಬದುಕು ಹಸನಾಗುವಂತೆ ವ್ಯವಸ್ಥೆ ಕಲ್ಪಿಸಬೇಕೆಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.